ಬೆಳಗಾವಿ: ನಮ್ಮ ರಾಜ್ಯದ ರಾಮನಗರದಲ್ಲಿ ರಾಮ ಮಂದಿರ ನಿರ್ಮಾಣವಾಗಲಿದೆ ಎಂದು ಸಚಿವ ಡಾ. ಸಿ.ಎನ್. ಅಶ್ವತ್ ನಾರಾಯಣ ಹೇಳಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಭಾರತದಂತೆ ದಕ್ಷಿಣ ಭಾರತದಲ್ಲೂ ರಾಮ ಭೂಮಿ ನಿರ್ಮಾಣ ಮಾಡುವ ಚಿಂತನೆ ನಡೆಸಿದ್ದೇವೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜೊತೆ ಚರ್ಚಿಸಿದ್ದೇನೆ ಎಂದರು.

ರಾಮನಗರದಲ್ಲಿರುವ ರಾಮ ಮಂದಿರ ಹಾಗೂ ಶಿವನ ದೇವಸ್ಥಾನಗಳ ಜೀರ್ಣೋದ್ಧಾರ ಕಾರ್ಯ ಮಾಡಬೇಕು. ಈ ಸಂಬಂಧ ಮುಖ್ಯಮಂತ್ರಿಗಳ ಜೊತೆ ಮಾತನಾಡಿದ್ದೇನೆ. ಹೀಗಾಗಿ ಈ ಬಾರಿ ಬಜೆಟ್ ನಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಅನುದಾನ ಬಿಡುಗಡೆ ಮಾಡುವ ಬಗ್ಗೆ ನಿರೀಕ್ಷೆ ಇದೆ ಎಂದರು.

ಜೀರ್ಣೋದ್ಧಾರ ಕಾರ್ಯ ಯಾವಾಗ ಪ್ರಾರಂಭ ಮಾಡುತ್ತಿರಿ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈ ಕೆಲಸ ಒಂದೆರಡು ದಿನಗಳಲ್ಲಿ ಆಗುವಂತದಲ್ಲ. ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ ಎಂದು ತಿಳಿಸಿದರು.