ಕಾರವಾರ: ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿ ಸಾವು ಮತ್ತು ಆಸ್ಪತ್ರೆ ಟೆಕ್ನಿಶಿಯನ್ ಹರ್ಷಿತಾ ಜಾದವ್ ಅವರಿಗೆ ಒತ್ತಡ ಹೇರಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಬಿ.ಎಸ್. ಯಡಿಯೂರಪ್ಪ ಜಿಲ್ಲಾಡಳಿತದಿಂದ ವರದಿ ಕೇಳಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮತ್ತು ವೈದ್ಯರಿಂದ ಒತ್ತಡಕ್ಕೊಳಗಾಗಿರುವ ಜಿಲ್ಲಾ ಆಸ್ಪತ್ರೆಯ ಟೆಕ್ನೀಶಿಯನ್ ಹರ್ಷಿತಾ ಜಾಧವ್ ಅವರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಶಾಸಕಿ ಶ್ರೀಮತಿ ರೂಪಾಲಿ ನಾಯ್ಕ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದರು. ಆ ಹಿನ್ನೆಲೆಯಲ್ಲಿ ಈ ಬಗ್ಗೆ ಪರಿಶೀಲಿಸಿ ಕೂಡಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಅವರಿಗೆ ಸಿಎಂ ಯಡಿಯೂರಪ್ಪ ಸೂಚಿಸಿದ್ದಾರೆ.

ಇಲ್ಲಿನ ಜಿಲ್ಲಾ ಆಸ್ಪತ್ರೆಯಲ್ಲಿ ಸರ್ವೋದಯ ನಗರದ ಗೀತಾ ಬಾನಾವಳಿ ಆ.31ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಳು. ಆರೋಗ್ಯವಾಗಿಯೇ ಇದ್ದ ಅವರು ಸೆಪ್ಟೆಂಬರ್ 3ರಂದು ಸಂತಾನ ಶಕ್ತಿ ಹರಣ ಚಿಕಿತ್ಸೆ ಸಂದರ್ಭದಲ್ಲಿ ಮೃತಪಟ್ಟಿದ್ದಳು. ವೈದ್ಯರ ನಿರ್ಲಕ್ಷ್ಯದ ಹಿನ್ನೆಲೆಯಲ್ಲಿ ಆಕೆ ಸಾವಿಗೀಡಾಗಿದ್ದಾಳೆ ಎಂಬ ಆರೋಪದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಘಟನೆ ಬಗ್ಗೆ ತನಿಖೆ ನಡೆಸಲು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ರೋಷನ್ ಅವರ ಅಧ್ಯಕ್ಷತೆಯಲ್ಲಿ ತಂಡವೊಂದನ್ನು ರಚಿಸಿದ್ದಾರೆ.

ಈ ನಡುವೆ ಅಪರೇಷನ್ ಥಿಯೇಟರ್ ನಲ್ಲಿ ಟೆಕ್ನೀಶಿಯನ್ ಆಗಿರುವ ಹರ್ಷಿತಾ ಜಾಧವ್ ಜಿಲ್ಲಾಧಿಕಾರಿ ಅವರಿಗೆ ಮನವಿ ನೀಡಿ, ಶಸ್ತ್ರಚಿಕಿತ್ಸೆ ಸಂದರ್ಭದಲ್ಲಿ ಗೀತಾ ಬಾನಾವಳಿ ಅವರಿಗೆ ಅರಿವಳಿಕೆ ಚುಚ್ಚುಮದ್ದನ್ನು ತಾನೇ ನೀಡಿದ್ದಾಗಿ ಒಪ್ಪಿಕೊಳ್ಳುವಂತೆ ಕ್ರಿಮ್ಸ್ ನಿರ್ದೇಶಕ ಡಾ.ಗಜಾನನ ನಾಯಕ, ಜಿಲ್ಲಾ ಸರ್ಜನ್ ಡಾ. ಶಿವಾನಂದ ಕುಡ್ತಲಕರ ಹಾಗೂ ಇತರ ವೈದ್ಯರು ತಮ್ಮ ಮೇಲೆ ಒತ್ತಡ ಹೇರುತ್ತಿರುವುದಾಗಿ ತಿಳಿಸಿದ್ದಾರೆ.

ವೈದ್ಯರ ಭಯ, ಒತ್ತಡದಿಂದ ತೀವ್ರ ಕಳವಳಗೊಂಡಿರುವ ಹರ್ಷಿತಾ ಜಾಧವ್ ಅವರಿಗೆ ಪ್ರಕರಣದ ತನಿಖೆ ಮುಗಿಯುವ ತನಕ ಸೂಕ್ತ ಭದ್ರತೆ ಒದಗಿಸಬೇಕು. ಈ ಬಗ್ಗೆ ಕೂಲಂಕಷವಾಗಿ ಪರಿಶೀಲನೆ ನಡೆಸಬೇಕು ಎಂದು ಶಾಸಕಿ ಶ್ರೀಮತಿ ರೂಪಾಲಿ ಎಸ್.ನಾಯ್ಕ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಆಗ್ರಹಿಸಿದ್ದರು.

ಅದರಂತೆ ಈ ಬಗ್ಗೆ ಪರಿಶೀಲನೆ ನಡೆಸಿ ಕೂಡಲೇ ಸೂಕ್ತ ಕ್ರಮ ಕೈಗೊಂಡು ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಜಿಲ್ಲಾಧಿಕಾರಿ ಅವರಿಗೆ ಸೂಚಿಸಿದ್ದಾರೆ.