ಕಾರವಾರ: ಲಿಂಗನಮಕ್ಕಿ ಜಲಾಶಯ ಭರ್ತಿಯಾಗುವ ಹಂತಕ್ಕೆ ಬಂದಿದ್ದು ಶರಾವತಿ ನದಿ ತೀರದಲ್ಲಿ ಹೈ ಅಲರ್ಟ್ ಘೋಷಣೆಯಾಗಿದೆ.

ಜಲಾಶಯದಿಂದ ಯಾವುದೇ ಕ್ಷಣದಲ್ಲಿ ನೀರು ಬಿಡುವ ಸಾಧ್ಯತೆ ಇದೆ. ಹಾಗಾಗಿ ನದಿ ತೀರದಲ್ಲಿರುವವರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಕೆಪಿಸಿಎಲ್ (ಕರ್ನಾಟಕ ವಿದ್ಯುತ್ ನಿಗಮ) ಸೂಚನೆ ಹೊರಡಿಸಿದೆ.

ಜಲಾಶಯ ಶಿವಮೊಗ್ಗ ಜಿಲ್ಲೆಯಲ್ಲಿದ್ದರೂ ಶರಾವತಿ ಹರಿದು ಸಮುದ್ರ ಸೇರುವುದು ಉತ್ತರ ಕನ್ನಡ ಜಿಲ್ಲೆಯಲ್ಲಿ. ಹಾಗಾಗಿ ಒಂದು ವೇಳೆ ಹೆಚ್ಚುವರಿ ನೀರನ್ನು ಹೊರಬಿಟ್ಟರೆ ಹೊನ್ನಾವರ ತಾಲೂಕಿನ ಗೇರುಸೊಪ್ಪ ಸೇರಿದಂತೆ ಹಲವಾರು ಪ್ರದೇಶಗಳು ಪ್ರವಾಹಕ್ಕೆ ಸಿಲುಕುತ್ತವೆ. ಆದ್ದರಿಂದ ಅಣೆಕಟ್ಟೆಯ ಕೆಳದಂಡೆಯಲ್ಲಿ ಹಾಗೂ ನದಿಯ ಪಾತ್ರದುದ್ದಕ್ಕೂ ವಾಸಿಸುತ್ತಿರುವ ಜನರು ತಮ್ಮ ಜನ , ಜಾನುವಾರು ಮುಂತಾದವುಗಳೊಂದಿಗೆ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಿಕೊಳ್ಳಬೇಕು ಎಂದು ಎಚ್ಚರಿಕೆ ನೀಡಲಾಗಿದೆ.

ಶರಾವತಿ ಯೋಜನೆಯ ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆ ಬೀಳುತ್ತಿದೆ. ಹೀಗಾಗಿ ಲಿಂಗನಮಕ್ಕಿ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಸತತವಾಗಿ ಬೀಳುತ್ತಿರುವ ಮಳೆಯಿಂದ ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟವು ದಿನೇ ದಿನೇ ಏರುತ್ತಿದೆ.

ಜಲಾಶಯದ ಗರಿಷ್ಠ ಮಟ್ಟ 1819.00 ಅಡಿಗಳಾಗಿದೆ. ಶುಕ್ರವಾರ ಜಲಾಶಯದ ನೀರಿನ ಮಟ್ಟ 1,806.85 ಅಡಿಗಳಾಗಿದೆ. ಒಳ ಹರಿವು ಕೂಡ 12,286 ಕ್ಯೂಸೆಕ್‌ ಗೆ ಏರಿದೆ. ಇದೇ ರೀತಿಯಲ್ಲಿ ಜಲಾಶಯಕ್ಕೆ ಒಳ ಹರಿವು ಮುಂದುವರೆದರೆ ಜಲಾಶಯವು ಶೀಘ್ರದಲ್ಲಿ ಗರಿಷ್ಠ ಮಟ್ಟವನ್ನು ತಲುಪುವ ಸಾಧ್ಯತೆ ಇದೆ.

ಅಣೆಕಟ್ಟೆಯ ಸುರಕ್ಷತೆ ದೃಷ್ಟಿಯಿಂದ ಹೆಚ್ಚುವರಿ ನೀರನ್ನು ಜಲಾಶಯದಿಂದ ಯಾವುದೇ ಸಮಯದಲ್ಲಿ ಹೊರಬಿಡಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಈ ಬಗ್ಗೆ ನದಿ ಪಾತ್ರದ ಜನರಿಗೆ ಯಾವುದೇ ತೊಂದರೆ ಆಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದ್ದು ಪರಿಸ್ಥಿತಿಯನ್ನು ನಿಭಾಯಿಸಲು ಜಿಲ್ಲಾಡಳಿತ ಹಾಗೂ ಹೊನ್ನಾವರ ತಾಲೂಕಾಡಳಿತ ಸನ್ನದ್ಧವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಅವರು ತಿಳಿಸಿದ್ದಾರೆ.