ಕಾರವಾರ: ಇಲ್ಲಿನ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಬಾಣಂತಿಯ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆ ಸಚಿವ ಬಿ. ಶ್ರೀರಾಮುಲು ಅವರು ಕಮೆಂಟ್ ಮಾಡಿದ್ದು, ಗೊಂದಲ ಹುಟ್ಟಿಸಿದ್ದಾರೆ.

ಕಾರವಾರ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿ ಸಂತಾನ ಶಕ್ತಿ ಹರಣ ಶಸ್ತ್ರ ಚಿಕಿತ್ಸೆ ವೇಳೆ ಮೃತಪಟ್ಟಿದ್ದಳು. ಆಕೆ ಅನಸ್ತೇಶಿಯಾದಿಂದ ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಸ್ಥಳೀಯರು ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸಿದ್ದರು. ಆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ತನಿಖೆಗೆ ಪ್ರತ್ಯೇಕ ತಂಡವನ್ನೂ ರಚಿಸಿದ್ದರು.

ಅಲ್ಲದೆ, ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಬುಧವಾರ ಪ್ರತಿಕ್ರಿಯಿಸಿದ್ದರು. ಬಾಣಂತಿ ಸಾವಿನ ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಇಲಾಖೆ ಕಾರ್ಯದರ್ಶಿ ಅವರಿಗೆ ಆದೇಶ ನೀಡಿದ್ದಾಗಿ ಅವರು ಸುದ್ದಿಗೋಷ್ಠಿಯೊಂದರಲ್ಲಿ ತಿಳಿಸಿದ್ದರು.

ಅದೇ ವಿಷಯವಾಗಿ ಟ್ವೀಟ್ ಮಾಡಿರುವ ಆರೋಗ್ಯ ಇಲಾಖೆ ಸಚಿವ ಬಿ. ಶ್ರೀರಾಮುಲು ಅವರು ಕಾರವಾರದ ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿದ್ದ ಗರ್ಭಿಣಿಯೊಬ್ಬಳು ಅನಸ್ತೇಶಿಯಾದಿಂದ ಸಾವನ್ನಪ್ಪಿದ ಪ್ರಕರಣ ಎಂದು ಪೋಸ್ಟ್ ಮಾಡಿದ್ದಾರೆ.

ಒಟ್ಟಾರೆ ಟ್ವೀಟ್ ನಲ್ಲಿ “ಕಾರವಾರದಲ್ಲಿರುವ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬಳು ಅನಸ್ತೇಶಿಯಾದಿಂದ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ವರದಿ ಕೇಳಾಗಿ್ದು, ವರದಿ ಪರಿಶೀಲಿಸಿ ತಪ್ಪಿತಸ್ಥರು ಕಂಡು ಬಂದಲ್ಲಿ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು’ ಎಂದು ಟ್ವೀಟ್ ಮಾಡಿದ್ದಾರೆ.

ಬುಧವಾರ ಮಧ್ಯಾಹ್ನ 2.10ಕ್ಕೆ ಟ್ವೀಟ್ ಮಾಡಿದ್ದಾರೆ. ಸಚಿವರ ಟ್ವಿಟ್ ಗೊಂದಲ ಹುಟ್ಟಿಸಿದರೂ. ಕಾರವಾರದ ಬಾಣಂತಿ ಸಾವಿನ ಪ್ರಕರಣ ರಾಜ್ಯದ ಗಮನ ಸೆಳೆದಿರುವುದು ಇದರಿಂದ ಸ್ಪಷ್ಟವಾಗುತ್ತದೆ.

ಕಾರವಾರ ಜಿಲ್ಲಾಸ್ಪತ್ರೆ ವೈದ್ಯಕೀಯ ಶಿಕ್ಷಣ ಸಂಸ್ಥೆ ಮತ್ತು ಆರೋಗ್ಯ ಇಲಾಖೆ ವ್ಯಾಪ್ತಿಯಲ್ಲಿ ಬರುವುದರಿಂದ ಈ ಎರಡು ಸಚಿವರ ಪ್ರತಿಕ್ರಿಯೆ ತನಿಖಾ ತಂಡದ ಜವಾಬ್ದಾರಿ ಹೆಚ್ಚಿಸಿದೆ. ಹಾಗಾಗಿ ಪ್ರಕರಣದ ಬಗ್ಗೆ ತನಿಖಾ ತಂಡದ ವರದಿ ಕೂಡ ಸಾಕಷ್ಟು ಮಹತ್ವದ್ದಾಗಲಿದೆ.